Home / News / Malnad / Kodagu / ದೇವರಾಜ ಅರಸು ಸಮಾನತೆಯ ಹರಿಕಾರ

ದೇವರಾಜ ಅರಸು ಸಮಾನತೆಯ ಹರಿಕಾರ

ಮಡಿಕೇರಿ: ‘ಉಳುವವನಿಗೆ ಭೂಮಿ’ ಯೋಜನೆಯನ್ನು ಜಾರಿಗೊಳಿಸುವ ಮೂಲಕ ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಸಮಾಜದಲ್ಲಿದ್ದ  ಅಸಮಾನತೆಯನ್ನು ತೊಡೆದು ಹಾಕಲು ಯತ್ನಿಸಿದ್ದರು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಚೋಡುಮಾಡ ಶರೀನ್‌ ಸುಬ್ಬಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ  ನಗರದ ಅರಸು ಭವನದಲ್ಲಿ ಬುಧವಾರ ನಡೆದ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 99ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿ.ಪಂ. ಉಪಾಧ್ಯಕ್ಷೆ ಅಲ್ಲಾರಂಡ ಬೀನಾ ಬೊಳ್ಳಮ್ಮ  ಮಾತನಾಡಿ, ಸಾಮಾಜಿಕವಾಗಿ ಶೋಷಿತರ, ಹಿಂದುಳಿದ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಕ್ರಾಂತಿಕಾರಿ ಸುಧಾರಣೆಗಳನ್ನು ಜಾರಿಗೆ ತಂದ ಧೀಮಂತ ನಾಯಕ ಅರಸು ಎಂದರು.

ಡಿ.ದೇವರಾಜ ಅರಸು ಅವರ ಜೀವನ ಚರಿತ್ರೆ ಕುರಿತ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಸ್.ಎನ್. ರಾಜಾರಾವ್, ಜ್ಯೋತಿಬಾ ಪುಲೆ, ಸಾಹು ಮಹಾರಾಜ್, ಪೆರಿಯಾರ್ ರಾಮಸ್ವಾಮಿ, ಡಾ.ಬಿ.ಆರ್. ಅಂಬೇಡ್ಕರ್ ಅವರಂತೆ ದೇವರಾಜ ಅರಸು ಅವರು ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮನೆ ಮಾತಾದರು ಎಂದು ಅವರು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಟಿ.ಪಿ. ರಮೇಶ್, ನಗರಸಭೆ ಅಧ್ಯಕ್ಷರಾದ ಜುಲೇಕಾಬಿ, ಜಿ.ಪಂ. ಸದಸ್ಯರಾದ ವೆಂಕಪ್ಪ ಪೂಜಾರಿ, ಬಿ.ಸಿ. ಸುಲೋಚನಾ, ಜಿಲ್ಲಾಧಿಕಾರಿ ಅನುರಾಗ್ ತಿವಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಪೌರಾಯುಕ್ತೆ ಬಿ.ಬಿ.ಪುಷ್ಪಾವತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ವಿ. ಸುರೇಶ್ ಉಪಸ್ಥಿತರಿದ್ದರು.

prajavani

Leave a Reply

Your email address will not be published. Required fields are marked *

*